ಯೆಶಾಯನು 52
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
2ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!
3ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.”
4ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, “ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು. ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.”
5ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.
6ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ” ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು.
7ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.
8ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.
9ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.
10ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
11ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
12ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.
13ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.
14ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,
15ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath